ಕೋಲಾರ: ಬೈಕ್ ಓವರ್ ಟೇಕ್ ಮಾಡಿದ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಮನನೊಂದು ಯುವಕ ಆತ್ಯಹತ್ಯೆ ಮಾಡಿಕೊಂಡಿದ್ದು, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಪೆತ್ತಾಂಡ್ಲಹಳ್ಳಿಯಿಂದ ಡಿಸಿ ಕಚೇರಿವರೆಗೂ ಬೈಕ್ ಜಾಥಾ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೆತ್ತಾಂಡ್ಲಹಳ್ಳಿ ಗ್ರಾಮದಲ್ಲಿ ಡಿ. ೧ರಂದು ಘಟನೆ ನಡೆದಿದ್ದು, ಮೃತ ಉದಯ್ ಕುಮಾರ್ ಕುಟುಂಬಕ್ಕೆ ೨೫ ಲಕ್ಷ ಪರಿಹಾರ ಹಾಗೂ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ನಂಗ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.