ಕುಷ್ಟಗಿ: ಸಹಜವಾಗಿ ಕಾಂಗ್ರೆಸ್‌ವರು ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗುವಂಥವರಿಗೆ ಬೆಂಬಲ ನೀಡುತ್ತಿರುವುದರಿಂದ ಹಿಂದುಗಳ ಹತ್ಯೆ ಈ ಹಿಂದೆ ಜಾಸ್ತಿಯಾಗಿತ್ತು ಎನ್ನುವುದನ್ನು ನಾವು ನೋಡಿದ್ದೇವೆ. ನಮ್ಮ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದುಗಳ ಹತ್ಯೆ ರಾಜ್ಯದಲ್ಲಿ ಕಡಿಮೆಯಾಗಿವೆ ಎಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಕೆ. ವಿರೂಪಾಕ್ಷಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪಟ್ಟಣದ ಕೃಷಿ ಉತ್ಪನ್ನಗಳ ಸಂಸ್ಕರಣೆ ಘಟಕದ ಸಿಬ್ಬಂದಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹಿಂದುಗಳ ಹತ್ಯೆ ಆಗಿದ್ದು, ಆ ವೇಳೆ ನಿಷೇಧಿತ ಮುಸ್ಲಿಂ ಸಂಘಟನೆಗಳ ಮೇಲೆ ಇದ್ದಂತಹ ಎಲ್ಲಾ ಪ್ರಕರಣಗಳನ್ನು ಹಿಂದಕ್ಕೆ ತೆಗೆದುಕೊಳ್ಳಲಾಗಿತ್ತು ಎಂದರು.
ರಾಜ್ಯದಲ್ಲಿ ಬಿಜೆಪಿ ಪಕ್ಷ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ರಾಜ್ಯದಲ್ಲಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಿಷ್ಕ್ರಿಯಗೊಂಡಿಲ್ಲ ಎಂದರು.
ಬಿಜೆಪಿ ಸರ್ಕಾರದ ಸಂಕಲ್ಪ ಯಾತ್ರೆಗೆ ಜನಸಾಗರವೇ ಸ್ವಯಂಪ್ರೇತವಾಗಿ ಹರಿದು ಬರುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ಇರುವಂತಹ ಕಾಂಗ್ರೆಸ್ ಪಕ್ಷದ ನಾಯಕರು ಎಷ್ಟು ವಾಹನಗಳನ್ನು ಕಳಿಸಿಕೊಟ್ಟಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ರಾಜ್ಯದ ಯಾವುದೇ ಮೂಲೆಯಲ್ಲಿ ಬಿಜೆಪಿ ಪಕ್ಷ ಯಾವುದಾದರೂ ಸಭೆ, ಸಮಾರಂಭಗಳನ್ನು ಆಯೋಜನೆ ಮಾಡಿದರೆ ಯಶಸ್ವಿ ಆಗುತ್ತದೆ ಎಂದರು.