ಕಾರವಾರ: ಕಿರಾಣಿ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ದವಸ ಧಾನ್ಯ, ಅಕ್ಕಿ ಸೇರಿದಂತೆ ಲಕ್ಷಾಂತರ ರೂಪಾಯಿ ಸಾಮಗ್ರಿ ಬೆಂಕಿಗೆ ಆಹುತಿಯಾದ ಘಟನೆ ಅಂಕೋಲಾದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಪಟ್ಟಣದ ಚಂದ್ರಿಕಾ ಪ್ರಾವಿಷನ್ ಸ್ಟೋರ್ಸ್ ಗೆ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ಜ್ವಾಲೆ ಹೆಚ್ಚಾಗಿದ್ದು, ಸ್ಥಳೀಯರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.
ಬಳಿಕ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಅಗ್ನಿಅವಘಡದಿಂದಾಗಿ ಅಂಗಡಿಯಲ್ಲಿದ್ದ ಅಕ್ಕಿ ಚೀಲ, ಬೇಳೆಕಾಳು ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಕಿರಾಣಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.